ರಾತ್ರಿ ಕರ್ಫ್ಯೂ ವಿಧಿಸುವ ನಿರ್ಧಾರವನ್ನು ಹಿಂತೆಗೆದುಕೊಂಡ ಕರ್ನಾಟಕ ಸರ್ಕಾರ
ಹೊಸ ಬಗೆಯ ಕೊರೊನಾ ವೈರಸ್ ಹರಡದಂತೆ ತಡೆಯುವ ದೃಷ್ಟಿಯಿಂದ ಕರ್ನಾಟಕ ಸರ್ಕಾರ ವಿಧಿಸಿದ್ದ ರಾತ್ರಿ ಕರ್ಫ್ಯೂ ಅನ್ನು ಕೊನೆ ಕ್ಷಣದಲ್ಲಿ ಹಿಂಪಡೆದಿದೆ.
ಹೊಸ ರೂಪ ತಾಳಿರುವ ಕೊರೊನಾವೈರಸ್ ಹರಡದಂತೆ ತಡೆಯಲು ಇಂದಿನಿಂದ ಜನೇವರಿ 1 ರವರೆಗೆ ರಾತ್ರಿ ಕರ್ಫ್ಯೂ ಘೋಷಿಸಿದ್ದ ನಿರ್ಧಾರವನ್ನು ಸರ್ಕಾರ ಹಿಂಪಡೆದಿದೆ.
ಸರ್ಕಾರದ ಈ ನಿರ್ಧಾರಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿತ್ತು. ಸಾರ್ವಜನಿಕರು, ಸಚಿವರುಗಳು ಮತ್ತು ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಫ್ಯೂ ಅನ್ನು ಹಿಂಪಡೆಯುವ ನಿರ್ಧಾರ ಕೈಗೊಂಡಿದ್ದಾರೆ ಬಿ ಎಸ್ ವೈ.
ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್‌ಗಳ ಮೂಲಕ ಮುಖ್ಯಮಂತ್ರಿಗಳು ರಾತ್ರಿ ಕರ್ಫ್ಯೂ ನಿರ್ಧಾರವನ್ನು ಹಿಂಪಡೆಯುವುದಾಗಿ ತಿಳಿಸಿದ್ದಾರೆ.
ಬ್ರಿಟನ್ ಮುಂತಾದ ದೇಶಗಳಲ್ಲಿ ಪತ್ತೆಯಾದ ಕೋವಿಡ್ ರೂಪಾಂತರ ವೈರಾಣು ಹರಡುವಿಕೆ ನಿಯಂತ್ರಿಸಲು, ತಜ್ಞರ ಸಲಹೆಯಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ತೀರ್ಮಾನಿಸಲಾಗಿತ್ತು. ಸಾರ್ವಜನಿಕ ವಲಯದ ಅಭಿಪ್ರಾಯಗಳನ್ನು ಪರಿಗಣಿಸಿ, ಸಚಿವರುಗಳ ಮತ್ತು ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.
ಸಾರ್ವಜನಿಕರು ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರದೆ ಸರಳವಾಗಿ ಎಲ್ಲ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದಿದ್ದಾರೆ.
ಯಾರೂ ಅನಗತ್ಯವಾಗಿ ಓಡಾಡದೆ, ಕೋವಿಡ್ ತಡೆಯಲು ಸರ್ಕಾರ ಸೂಚಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದು ಅವರು ಕೋರಿದ್ದಾರೆ.
ನೆರೆಯ ರಾಜ್ಯ ಮಹಾರಾಷ್ಟ್ರ ಸೋಮವಾರ ರಾತ್ರಿ ಕರ್ಫ್ಯೂ ವಿಧಿಸುವ ತೀರ್ಮಾನವನ್ನು ಕೈಗೊಂಡಿತ್ತು.
ನಿನ್ನೆ ಸರ್ಕಾರ ಹೇಳಿದ ಪ್ರಕಾರ ಡಿಸೆಂಬರ್ 24 ರಿಂದ ಜನೇವರಿ 1 ರ ವರೆಗೆ ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಾಗಬೇಕಿತ್ತು, ಆದರೆ ಕೊನೆ ಕ್ಷಣದಲ್ಲಿ ಉಂಟಾದ ತೀವ್ರ ವಿರೋಧದಿಂದ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆದಿದೆ.